ರೋಟಾ ವೈರಸ್– ಲಸಿಕಾ ಅಭಿಯಾನಕ್ಕೆ ಸೂಚನೆ:
ರೋಟಾ ವೈರಸ್ ನಿಂದ ಉಲ್ಬಣಿಸುವ ಭೇದಿ ನಿಯಂತ್ರಣಕ್ಕೆ ಲಸಿಕೆ ಅಭಿಯಾನವನ್ನು ಜಿಲ್ಲೆಯಾದ್ಯಂತ ಕೈಗೊಳ್ಳಬೇಕು ಎಂದು ಡಾ.ಬೊಮ್ಮನಹಳ್ಳಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಆಗಸ್ಟ್ ಎರಡನೇ ವಾರದಿಂದ ಲಸಿಕೆ ಅಭಿಯಾನವನ್ನು ಹಮ್ಮಿಕೊಳ್ಳಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಡಾ.ಐ.ಎಚ್.ಗಡಾದ ವಿವರಿಸಿದರು.
ಕೊಳಚೆ ಪ್ರದೇಶಗಳಲ್ಲಿ ಹಾಗೂ ದುರ್ಬಲ ವರ್ಗದ ಜನರು ಹೆಚ್ಚಾಗಿ ವಾಸಿಸುವ ಪ್ರದೇಶದಲ್ಲಿ ರೋಟಾ ವೈರಸ್ ನಿಯಂತ್ರಣ ಲಸಿಕೆಯ ಬಗ್ಗೆ ಅರಿವು ಮೂಡಿಸಬೇಕು. ಮಾತೃಪೂರ್ಣ ಯೋಜನೆಯ ಫಲಾನುಭವಿಗಳಿಗೆ ಲಸಿಕೆ ಹಾಕಿಸಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.
ಡೆಂಗಿ ನಿಯಂತ್ರಣ ಕ್ರಮಕ್ಕೆ ಸೂಚನೆ:
ಡೆಂಗಿ ಜ್ವರ ಮತ್ತು ಚಿಕುನ್ ಗುನ್ಯಾ ನಿಯಂತ್ರಣಕ್ಕೆ ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದರು.
ಅಂಗನವಾಡಿ ಮತ್ತು ಶಾಲೆಗಳಲ್ಲಿ ಯಾವುದೇ ಮಗು ಮೂರು ದಿನಗಳಿಗಿಂತ ಹೆಚ್ಚು ಗೈರುಹಾಜರಾದರೆ ಸಂಬಂಧಿಸಿದ ಸ್ಥಳೀಯ ಆರೋಗ್ಯಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನೀರು ಸಂಗ್ರಹಗೊಳ್ಳುವ ಪ್ರದೇಶಗಳಲ್ಲಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುವುದರಿಂದ ಮಹಾನಗರ ಪಾಲಿಕೆ ನೀರು ಸಂಗ್ರಹವಾಗುವ ಸ್ಥಳಗಳ ಸ್ವಚ್ಛತೆಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ನೀರು ಸಂಗ್ರಹ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಸೊಳ್ಳೆಗಳ ಉತ್ಪತ್ತಿ ಜಾಸ್ತಿಯಾಗುತ್ತಿದ್ದು, ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಎಂ.ಎಸ್.ಪಲ್ಲೇದ ತಿಳಿಸಿದರು.
ಸಂಶಯಾಸ್ಪದ ಡೆಂಗಿ ಪ್ರಕರಣದಲ್ಲಿ ಕಳೆದ ತಿಂಗಳು ಇಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಇದು ಇನ್ನೂ ದೃಢಪಟ್ಟಿರುವುದಿಲ್ಲ. ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಅವರು ವಿವರಿಸಿದರು. ಯಾವುದೇ ಕಾಲರಾ ಪ್ರಕರಣಗಳು ಜಿಲ್ಲೆಯಲ್ಲಿ ವರದಿಯಾಗಿಲ್ಲ ಎಂದು ಡಾ.ತುಕ್ಕಾರ್ ತಿಳಿಸಿದರು.
ಬೀದಿನಾಯಿ ನಿಯಂತ್ರಣಕ್ಕೆ ಸೂಚನೆ:
ಮಕ್ಕಳ ಮೇಲೆ ಬೀದಿನಾಯಿಗಳ ದಾಳಿ ಪ್ರಕರಣಗಳು ವರದಿಯಾಗುತ್ತಿರುವುದರಿಂದ ಬೀದಿ ನಾಯಿಗಳ ನಿಯಂತ್ರಣಕ್ಕೆ ಸೂಚನೆ
ಹಾವು ಕಡಿತ; ಗಾಬರಿ ಬೇಡ
ಹಾವು ಕಡಿತಕ್ಕೆ ಜಿಲ್ಲಾಸ್ಪತ್ರೆ ಸೇರಿದಂತೆ ಸ್ಥಳೀಯ ಮಟ್ಟದಲ್ಲಿಯೇ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಚಿಕಿತ್ಸೆ ಲಭ್ಯ ಇರುವುದರಿಂದ ಸಾರ್ವಜನಿಕರು ಗಾಬರಿಪಡಬೇಕಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದರು.
ಒಂದು ವೇಳೆ ಸ್ಥಳೀಯ ಆಸ್ಪತ್ರೆಯಲ್ಲಿ ತಕ್ಷಣಕ್ಕೆ ಚಿಕಿತ್ಸೆ ಲಭ್ಯವಿಲ್ಲದಿದ್ದರೆ ಕೂಡಲೇ 108 ಆಂಬ್ಯುಲೆನ್ಸ್ ಮೂಲಕ ತಾಲ್ಲೂಕು ಅಥವಾ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ ಚಿಕಿತ್ಸೆ ಪಡೆಯಬಹುದು ಎಂದು ಹೇಳಿದರು.
ಹಾವು ಕಡಿತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚುಚ್ಚುಮದ್ದು ಮತ್ತು ಔಷಧಿ ದಾಸ್ತಾನು ಇಟ್ಟುಕೊಳ್ಳಬೇಕು ಎಂದು ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಜನವರಿಯಿಂದ ಜುಲೈವರೆಗೆ ಒಟ್ಟಾರೆ 207 ಹಾವು ಕಡಿತ ಪ್ರಕರಣಗಳು ವರದಿಯಾಗಿವೆ. ಅದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಲಾಯಿತು.
ಈ ಬಗ್ಗೆ ವಿಸ್ತೃತ ಚರ್ಚೆ ನಡೆಸಿದ ಜಿಲ್ಲಾಧಿಕಾರಿಗಳು ಇಂತಹ ಪ್ರಕರ ವರದಿಯಾದಾಗ ಸಕಾಲಕ್ಕೆ ಚಿಕಿತ್ಸೆ ನೀಡಬೇಕು ಎಂದರು.
ಆರೋಗ್ಯಾಧಿಕಾರಿಗಳಿಗೆ ಎಚ್ಚರಿಕೆ:
ಸಾರ್ವಜನಿಕ ಆರೋಗ್ಯ ರಕ್ಷಣೆ, ಸ್ವಚ್ಛತೆ ಮತ್ತಿತರ ವಿಷಯಗಳನ್ನು ನಿರ್ಲಕ್ಷಿಸುವ ತಾಲ್ಲೂಕು ಆರೋಗ್ಯಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಡಾ.ಬೊಮ್ಮನಹಳ್ಳಿ ಅವರು ಸೂಚನೆ ನೀಡಿದರು.
ಮಹಾನಗರ ಪಾಲಿಕೆಯ ಆಯುಕ್ತರಾದ ಅಶೋಕ ದುಡಗುಂಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ, ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಾನಂದ ಮಗ್ದುಂ, ತಹಶಿಲ್ದಾರ ಮಂಜುಳಾ ನಾಯಕ ಸೇರಿದಂತೆ ಸಭೆಯಲ್ಲಿ ಉಪಸ್ಥಿತರಿದ್ದರು.